ಶಿವಮೊಗ್ಗ: ಪೀಪಲ್ಸ್ ಲಾಯರ್ಸ್ ಗಿಲ್ಡ್, ಶಿವಮೊಗ್ಗದ ಸಹಯೋಗದಲ್ಲಿ ನಿವೃತ್ತ ನ್ಯಾಯಮೂರ್ತಿ ಹಾಗೂ ಕರ್ನಾಟಕ ಉಚ್ಚ ನ್ಯಾಯಾಲಯದ ಮಾಜಿ ನ್ಯಾಯಮೂರ್ತಿ ಶ್ರೀ ಹೆಚ್.ಎನ್. ನಾಗಮೋಹನ್ ದಾಸ್ ಅವರ ಬಹು ನಿರೀಕ್ಷಿತ ಹಾಗೂ ಮಹತ್ವಾಕಾಂಕ್ಷೆಯ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿಯ ಬಿಡುಗಡೆ ಸಮಾರಂಭವನ್ನು ಆಯೋಜಿಸಲಾಗಿದೆ.
ಕನ್ನಡ ಮತ್ತು ಇಂಗ್ಲಿಷ್ ಆವೃತ್ತಿಗಳಲ್ಲಿ ಪ್ರಕಟವಾಗಿರುವ ಈ ಕೃತಿಯು ನ್ಯಾಯಾಂಗ ಕ್ಷೇತ್ರದಲ್ಲಿನ ಪ್ರಮುಖ ಹಾಗೂ ಗಮನಾರ್ಹ ಪ್ರಕರಣಗಳ ಕುರಿತು ಒಳನೋಟ ನೀಡಲಿದೆ.
ಆಗಸ್ಟ್ 31, 2026ರ ಸೋಮವಾರ ಸಂಜೆ 5.30ಕ್ಕೆ ಶಿವಮೊಗ್ಗದ ಜಿಲ್ಲಾಧಿಕಾರಿಗಳ ಆವರಣದಲ್ಲಿರುವ ಸರ್ಕಾರಿ ನೌಕರರ ಭವನದಲ್ಲಿ ಕಾರ್ಯಕ್ರಮ ನಡೆಯಲಿದೆ.
ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಕೃತಿಯನ್ನು ಬಿಡುಗಡೆ ಮಾಡಲಿದ್ದಾರೆ. ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನ್ ದಾಸ್ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ.
ಹಿರಿಯ ವಕೀಲ ಹಾಗೂ ದೇಶೀಯ ವಿದ್ಯಾ ಶಾಲೆಯ ಅಧ್ಯಕ್ಷ ಕೆ. ಬಸಪ್ಪಗೌಡ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಪತ್ರಕರ್ತ ಹಾಗೂ ಸಂಶೋಧಕ ಹರ್ಷಕುಮಾರ್ ಕುಗ್ಗೆ ಅವರು ಕೃತಿ ಕುರಿತು ಮಾತನಾಡಲಿದ್ದಾರೆ.
ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಕ್ಷರಿ, ಸಿಜಿಐಆರ್ ರಾಷ್ಟ್ರೀಯ ಕಾನೂನು ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಅನಲ, ರಾಜ್ಯ ಸಂಚಾಲಕ ಎಂ. ಗುರುಮೂರ್ತಿ ಹಾಗೂ ಇತರ ಗಣ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಪೀಪಲ್ಸ್ ಲಾಯರ್ಸ್ ಗಿಲ್ಡ್, ಶಿವಮೊಗ್ಗದ ಸಂಚಾಲಕ ಕೆ.ಪಿ. ಶ್ರೀಪಾಲ ಅವರು ಕಾರ್ಯಕ್ರಮದ ಪ್ರಸ್ತಾವನೆ ಸಲ್ಲಿಸಲಿದ್ದಾರೆ. ವಕೀಲರು, ಕಾನೂನು ವಿದ್ಯಾರ್ಥಿಗಳು, ಪತ್ರಕರ್ತರು, ಸಂಶೋಧಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಂಘಟಕರು ಮನವಿ ಮಾಡಿದ್ದಾರೆ.